ಬೆಂಗಳೂರು: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರ ಸ್ಥಳ ಆಯ್ಕೆಗೆ ಅಂತಿಮ ಕಸರತ್ತು ನಡೆಸುತ್ತಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಈಗಾಗಲೇ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು ಇದೀಗ ಸ್ಥಳ ಆಯ್ಕೆ ಬಗ್ಗೆ ಮಹತ್ವದ ಅಪ್‌ಡೇಟ್ ಕೊಟ್ಟಿದ್ದಾರೆ.
ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಎಂ ಬಿ ಪಾಟೀಲ್, ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಸ್ಥಳ ನಿಗದಿ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆಸಲಾಗಿದೆ. ಮುಂದಿನ ವಾರ ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಲಾಗುವುದು, ಬಳಿಕ ವಿಮಾನ ನಿಲ್ದಾಣ ನಿರ್ಮಾಣ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಆರು ಕಡೆ ಸ್ಥಳ ಗುರುತಿಸಿರುವ ಸರ್ಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಸುವವರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಒತ್ತಡ ಹೆಚ್ಚಾಗುತ್ತಿರುವ ಕಾರಣ, ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಸರ್ಕಾರ ತೀರ್ಮಾನಿಸಿದ್ದು ಅದಕ್ಕಾಗಿ ಸೂಕ್ತ ಸ್ಥಳವನ್ನು ಅಂತಿಮಗೊಳಿಸಲಿದೆ.
ಈಗಾಗಳೇ ಬೆಂಗಳೂರು ಸುತ್ತಮುತ್ತ ಆರು ಕಡೆಗಳಲ್ಲಿ ಸ್ಥಳವನ್ನು ಗುರುತಿಸಲಾಗಿದ್ದು ಯಾವ ಸ್ಥಳ ಸೂಕ್ತ ಎಂದು ಈಗಾಗಲೇ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆ ನಡೆಸಿದ್ದು, ಸ್ಥಳ ಆಯ್ಕೆ ಪ್ರಕ್ರಿಯೆ ಕೊನೆಯ ಹಂತಕ್ಕೆ ಬಂದಿದೆ. ನೆಲಮಂಗಲ, ಡಾಬಸ್‌ಪೇಟೆ, ಹಾರೋಹಳ್ಳಿ, ಮಾಗಡಿ ಬಳಿ ಒಟ್ಟು ಆರು ಸ್ಥಳಗಳನ್ನು ಗುರುತಿಸಲಾಗಿದ್ದು ಇವುಗಳಲ್ಲಿ ಒಂದು ಕಡೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ.
ಡಾಬಸ್ ಪೇಟೆ ಮತ್ತು ನೆಲಮಂಗಲ ಬಳಿ ಗುರುತಿಸಿರುವ ಸ್ಥಳಗಳು ಇದರಲ್ಲಿ ಮುಂಚೂಣಿಯಲ್ಲಿದ್ದು ಎರಡರಲ್ಲಿ ಒಂದು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ನಿರೀಕ್ಷೆ ಮಾಡಲಾಗಿದೆ.
ಭೂಮಿ ಬೆಲೆ ಗಗನಕ್ಕೆ ಈಗಾಗಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಅಂತಿಮಗೊಳಿಸುವ ಮುನ್ನವೇ ಈ ಆರು ಸ್ಥಳಗಳ ಸುತ್ತಮುತ್ತಲಿನ ಅನೇಕ ಪ್ರದೇಶಗಳಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ.
ಈ ಭಾಗದಲ್ಲಿ ಸ್ಥಳ ಖರೀದಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳು ಮುಗಿಬಿದ್ದಿದ್ದಾರೆ. ಆದರೆ ಜಾಗ ಮಾರುವವರು ಸ್ಥಳ ಆಯ್ಕೆಯಾಗಲಿ ಎಂದು ಕಾಯುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ. ಬಿ ಪಾಟೀಲ್ ಹೇಳಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.