ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಪ್ರಕರಣ ತಾರಕ್ಕಕ್ಕೇರಿದ್ದು, ಪ್ರತಿದಿನ 10 ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಕಿರುಕುಳ ತಾಳಲಾರದೆ ಹಲವರು ಮನೆ, ಊರುಗಳನ್ನು ಬಿಟ್ಟರೆ ಕೆಲವರು ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ (State Government) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಸಿಎಂ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಕಿದ ಪ್ರಶ್ನೆಗಳೇನು?
- ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?
- ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?
- ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?
- ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?
- RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ?
- ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?
- ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.
ಪ್ರಕರಣಗಳ ಬಗ್ಗೆ ಸಿಎಂಗೆ ಗೃಹ ಇಲಾಖೆ ಮಾಹಿತಿ
ಸಭೆಯಲ್ಲಿ ಗೃಹ ಇಲಾಖೆ ಕೂಡ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದೆ. ಜನಸಮಾನ್ಯರಿಗೆ ಕಿರುಕುಳಹೆಚ್ಚಾಗುತ್ತಿದೆ. ಹಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಆತ್ಮಹತ್ಯೆ, ಮನೆಯಿಂದ ಹೊರಹಾಕಿರುವ ಪ್ರಕರಣ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು. ಮಾನಸಿಕ, ದೈಹಿಕ ಕಿರುಕುಳದ ಬಗ್ಗೆ ವಿವರಣೆ. ಪ್ರತಿನಿತ್ಯ ಒಂದಲ್ಲ ಒಂದು ಆರೋಪಗಳು ಬರರುತ್ತಿವೆ ಎಂದು ಹೃಹ ಇಲಾಖೆ ತಿಳಿಸಿದೆ.
ವಿವಿಧ ಠಾಣೆಗಳಲ್ಲಿ ಹಲವು ಆರೋಪಗಳು ದಾಖಲಾಗಿವೆ. ಪ್ರಕರಣ ಕೆದಕಿದಾಗ ಕಿರುಕುಳದ ಆರೋಪವೇ ಹೆಚ್ಚಿವೆ ಎಂದು ಸಭೆಯಲ್ಲಿಅಂಕಿಅಂಶ ಸಮೇತ ಸಿಎಂ ಸಿದ್ದರಾಮಯ್ಯಗೆ ಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟಿಲ್, ಕಂದಾಯ ಸಚಿವ ಕೃಷ್ಣ ಭೈರೆಗೌಡ ಸೇರಿ ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗಿಯಾಗಿದ್ದರು.