Tuesday, April 29, 2025
Google search engine
Homeಜಿಲ್ಲಾಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
spot_img

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ: ಸವದತ್ತಿಯ ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ಯ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಭಕ್ತಾದಿಗಳಿಗೆ ತೊಂದರೆಯಾಗದಂತೆ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ರಸ್ತೆಗಳನ್ನು ಮಾರ್ಪಡಿಸಿ ಟ್ರಾಫಿಕ್ ನಿಯಂತ್ರಣ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಬುಧವಾರ (ಫೆ.12) ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಚಕ್ಕಡಿ ಗಾಡಿ, ಜೀಪ್, ಟೆಂಪೋ, ಟ್ರ್ಯಾಕ್ಟರ್, ಬೈಕ್, ಕಾರ್, ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರಿಸುಮಾರು 1500 ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರು, ಪ್ರವಾಸೋದ್ಯಮ ಮಂಡಳಿ ಅಧ್ಯಕರು, ಈ ಭಾಗದ ಶಾಸಕರ ಸಲಹೆಯಂತೆ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದಲ್ಲದೇ ಮೊದಲ ಬಾರಿಗೆ ಮಂಡಳಿ ಹಾಗೂ ಪ್ರಾಧಿಕಾರದ ವತಿಯಿಂದ ಭಕ್ತಾಧಿಗಳಿಗಾಗಿ ಮಜ್ಜಿಗೆ ದಾಸೋಹ ಮಾಡಲಾಗಿದೆ. ಮುಂದಿನ ವರ್ಷದಲ್ಲಿ ದಾಸೋಹ ಭವನ ಮಾಡಬೇಕು ಎಂದು ಯೋಜನೆ ರೂಪಿಸಲಾಗಿದೆ. ತಿರುಪತಿ ಧರ್ಮಸ್ಥಳದ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅನುದಾನ ಲಭ್ಯವಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

ದನಕರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಪಾರ್ಕಿಂಗ್ ಮತ್ತು ಟ್ರಾಫಿಕ್ ಮೂಲ ಸಮಸ್ಯೆಯಾಗಿತ್ತು. ಚಕ್ಕಡಿ ಗಾಡಿ ಹಾಗೂ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ಮಾಡಲಾಗಿದೆ.

ಗುಣಮಟ್ಟದ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಮಂಡಳಿಯಿಂದ ಯೋಜನೆ ಸಿದ್ಧಗೊಳ್ಳುತ್ತಿದೆ. ಜೋಗುಳಬಾವಿ, ಉಗರಗೋಳ ಹಾಗೂ ಸವದತ್ತಿ ರಸ್ತೆಯಿಂದ ಬರುವ ವಾಹನಗಳಿಗೆ ನೇರವಾಗಿ ಪಾರ್ಕಿಂಗ್ ಹೋಗಲು ರಸ್ತೆಗಳನ್ನು ಗುರುತಿಸಲಾಗಿದೆ. ಇದರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಸಹಾಯವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ವಿವಿಧ ಭಾಗಗಳಿಂದ ಬರುವ ಭಕ್ತರಿಗೆ ಮುಖ್ಯವಾಗಿ ಪಾರ್ಕಿಂಗ್, ಲೈಟಿಂಗ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರು ವಾಹನಗಳನ್ನು ಪಾರ್ಕ್ ಮಾಡಿದಾಗ ಟ್ರಾಫಿಕ್ ಸಮಸ್ಯೆಯಾಗುತ್ತಿದೆ ಅದಕ್ಕೆ 15 ಟೊಯಿಂಗ್ ವಾಹನಗಳ ಮೂಲಕ ಪಾರ್ಕ್ ಮಾಡಿದ ವಾಹನಗಳನ್ನು ಸ್ಥಳಾಂತರಿಸಲಾಗುತ್ತಿದೆ.

ದೇವಸ್ಥಾನದ ಬದಿಯ ರಸ್ತೆಗಳಲ್ಲಿ ಕೂಡ ಯಾವುದೇ ವಾಹನಗಳ ಪಾರ್ಕಿಂಗ್ ಅವಕಾಶ ಕೊಟ್ಟಿಲ್ಲ. ರಸ್ತೆಗಳ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.
ಇದರಿಂದ ದೇವಸ್ಥಾನದ ಸುತ್ತ ಮುತ್ತ ಒಳ್ಳೆಯ ಸ್ವಚ್ಛ ವಾತಾವರಣ ನಿರ್ಮಾಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ತಿಳಿಸಿದರು.
***

RELATED ARTICLES
- Advertisment -spot_img

Most Popular

error: Content is protected !!