ಬೆಳಗಾವಿ: ಮಹಿಳೆಯರ ಸಬಲೀಕರಣಕ್ಕಾಗಿಯೇ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.
ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು.
ಬೆಳಗಾವಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು.
ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಟವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ. ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ, ಮಗುವನ್ನು ಸಮಾಜದ ಆಸ್ತಿಯಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ. ಮಗು ನಾಳೆಯ ಉತ್ತಮ ಪ್ರಜೆಯಾಗಬೇಕು, ಸಮಾಜಕ್ಕೆ ಆಸ್ತಿಯಾಗಬೇಕು.ಮಗುವಿಗೆ ಉತ್ತಮ ಸಂಸ್ಕಾರ ಕೊಟ್ಟು, ಬೆಳೆಸಿ ಎನ್ನುವುದನ್ನು ಹೇಳುವುದಕ್ಕಾಗಿ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಂದು ಲಕ್ಷ್ಮೀ ಹೆಬ್ಬಾಳಕರ್ ವಿವರಿಸಿದರು.
ಉಡಿ ತುಂಬಿ ಹರಸಿದ ಸಚಿವೆ: ವೇದಿಕೆ ಮೇಲೆ ಗರ್ಭಿಣಿಯರನ್ನು ಕೂರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೀರೆ, ತೆಂಗಿನಕಾಯಿ ಉಡುಗರೆಯಾಗಿ ಕೊಟ್ಟರು. ಬಳಿಕ ಪುಷ್ಪವೃಷ್ಟಿಗೈದು, ಆರತಿ ಬೆಳಗಿದರು. ಇದೇ ವೇಳೆ ಗರ್ಭಿಣಿಯರು ಹೆಬ್ಬಾಳ್ಕರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ಬಳಿಕ ಎಲ್ಲರಿಗೂ ಹೋಳಿಗೆ ಊಟವನ್ನು ಮಾಡಿಸಲಾಗಿತ್ತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ 100 ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್, ಬ್ರೇಲ್ ವಾಚ್ ಮತ್ತು ಲ್ಯಾಪ್‌ಟಾಪ್‌ಗಳನ್ನು ನೀಡಲಾಗಿದೆ. ಸಮಾರಂಭಕ್ಕೂ ಮುನ್ನ ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವರ ಸಹೋದರಿಯರು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್.ಆರ್ ಸೇರಿ ಮತ್ತಿತರರು ಇದ್ದರು.