ಬೆಳಗಾವಿ: ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ವಿತರಣೆ ಹಾಗೂ ಮಕ್ಕಳ ವಸತಿ ನಿಲಯಗಳಲ್ಲಿ ಮಕ್ಕಳ ಸ್ನೇಹಿ ವಾತಾವರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಕುರಿತು ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇರುವ ಪೌಷ್ಠಿಕ ಪುನರ್ವಸತಿ ಕೇಂದ್ರ (ಎನ್. ಆರ್. ಸಿ) ಗಳಲ್ಲಿ ತೀವ್ರ ಅಪೌಷ್ಠಿಕ ಮಕ್ಕಳನ್ನು ದಾಖಲಿಸಿ ಸರಿಯಾದ ಚಿಕಿತ್ಸೆಯನ್ನು ನೀಡುವುದು ಜಿಲ್ಲೆಯ ಎಲ್ಲಾ ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ತೀವ್ರ ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಲು ಕ್ರಮವಹಿಸಬೇಕು.
ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವುದು ಮತ್ತು ಪ್ರವೇಶ ನೀಡಬೇಕು. ಕಾವಲು ಸಮಿತಿ ಸಭೆ ಮತ್ತು ಪಾಲಕ ಪೋಷಕ ಸಭೆಗಳನ್ನು ಮಾಸಿಕವಾಗಿ ಸರಿಯಾಗಿ ನಿರ್ವಹಿಸಬೇಕು. ಮಕ್ಕಳಿಗೆ ಮಾನಸಿಕ ಆರೋಗ್ಯದ ಸಂಬಂಧ ಆಪ್ತಸಮಾಲೋಚನೆ ಮೂಲಕ ಮಾನಸಿಕ ಆರೋಗ್ಯ ಸ್ವಸ್ಥವಾಗಿ ಇರುವಂತೆ ನೋಡಿಕೊಳ್ಳಬೇಕು. ಶಾಲೆ ಮತ್ತು ಅಂಗನವಾಡಿಗಳಲ್ಲಿ ಹಾಜರಾತಿ ಸರಿಯಾಗಿ ನಿರ್ವಹಿಸಬೇಕು. ಹಾಸ್ಟೆಲ್ ಗಳಲ್ಲಿ ನಿಲಯ ಪಾಲಕರು ಸರಿಯಾದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಬಾಲ್ಯ ವಿವಾಹ ತಡೆಗಟ್ಟುವ ಕುರಿತಂತೆ ಎಲ್ಲಾ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಹಾಸ್ಟೆಲ್ ಗಳಲ್ಲಿ ಕಮಿಟಿಗಳನ್ನು ರಚಿಸಬೇಕು. ಪ್ರತಿ ಗ್ರಾಮ ಸಭೆ, ವಾರ್ಡ್ ಸಭೆಗಳಲ್ಲಿ ಮಹಿಳಾ ಸಭೆ ಮತ್ತು ಮಕ್ಕಳ ಸಭೆಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಸೀಲಿಂಗ್ ಮೇಲಿನ ಫ್ಯಾನ್ ಗಳನ್ನು ತೆಗೆದು ಹಾಕಿ ಗೋಡೆಗೆ ಫ್ಯಾನ್ ಗಳನ್ನ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ. ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ಚೇತನ್ ಕುಮಾರ್ ಎಂ.ಎನ್ ಜಿಲ್ಲಾ ನಿರೂಪಣಾಧಿಕಾರಿಗಳಾದ ಅಣ್ಣಪ್ಪ ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಠೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪರ್ವಿನ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಜಿಲ್ಲಾ ಮತ್ತು ತಾಲ್ಲೂಕಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.