ಯಾದಗಿರಿ : ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಮೃತಪಟ್ಟಿದ್ದು, ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತರಾಗಿದ್ದ ಇವರು, ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರೆನಿಸಿಕೊಂಡಿದ್ದರು.
ಸುರಪುರ ವಿಧಾನಸಭೆ ಕ್ಷೇತ್ರದ ಎಸ್ ಟಿ ಮೀಸಲು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಾಜಾ ವೆಂಕಟಪ್ಪ ನಾಯಕ. ಅವರು ಕಾಂಗ್ರೆಸ್ ಪಕ್ಷದಿಂದಲೇ ಪ್ರತಿ ಬಾರಿ ಗೆದ್ದಿದ್ದಾರೆ. 1994, 1999, 2013, 2023ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ನಾಯಕ ಅವರು ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷ ಕಟ್ಟಲು ಶಕ್ತಿ ಮೀರಿ ಶ್ರಮಿಸಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಸೋಮವಾರ (ಫೆ. 26) ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.