ತುಮಕೂರು: ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಒಂದೇ ವಾರದಲ್ಲಿ ಸಾವನ್ನಪ್ಪಿರೋ ಘಟನೆ ಪಾವಗಡ ತಾಲೂಕಿನಲ್ಲಿ ನಡೆದಿದೆ.
ಪಾವಗಡ ತಾಯಿ, ಮಕ್ಕಳ ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿರುವ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜವಂತಿ ಗ್ರಾಮದ ಅಂಜಲಿ (25), ಬ್ಯಾಡನೂರು ಗ್ರಾಮದ ನರಸಮ್ಮ (40), ವೀರಲಗೊಂದಿ ಗ್ರಾಮದ ಅನಿತಾ (30) ಮೃತ ದುರ್ದೈವಿಗಳು.
ಮೂವರು ಮಹಿಳೆಯರು ಕಳೆದ ಫೆಬ್ರವರಿ 22ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅನಿತಾ ಫೆ.22ರಂದು ಸಾವನ್ನಪ್ಪಿದ್ದಾರೆ. ಅಂಜಲಿ ಎಂಬ ಮಹಿಳೆ ಫೆಬ್ರವರಿ 24ರಂದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಫೆಬ್ರವರಿ 25ರಂದು ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನರಸಮ್ಮ ಕೂಡ ಸಾವನ್ನಪ್ಪಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಾವಗಡ ತಹಶೀಲ್ದಾರ್, ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿದ್ದು, ಪ್ರತಿಭಟನೆ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.