ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ನೀಡುವ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಂದು ಸಂಜೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ಬಳಿಕ ಹಾಗೂ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಅಧಿಸೂಚನೆ ಹೊರಡಿಸಿದೆ. ಸಿಎಎ ಜಾರಿಗೊಳಿಸಲು ಆದೇಶ ಹೊರಡಿಸಿರುವ ಮೋದಿ ಸರ್ಕಾರ, 2014ರ ಡಿಸೆಂಬರ್ 31ರವೆರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರು, ಅಂದರೆ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನರಿಗೆ ಭಾರತೀಯ ರಾಷ್ಟ್ರೀಯತೆ ನೀಡಲು ಪ್ರಾರಂಭಿಸಲಿದೆ.
ಸಿಎಎ 2019, ಅರ್ಹರಾಗಿರುವ ವ್ಯಕ್ತಿಗಳಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಗೆ ಸಂಸತ್ತಿನಲ್ಲಿ ಅಂಗೀಕಾರ ದೊರೆತಿತ್ತು. ಆದರೆ, ಅದರ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಕಾರಣ ಅದು ಜಾರಿಗೆ ಬಂದಿರಲಿಲ್ಲ. ಕಳೆದ ವರ್ಷ ಡಿಸೆಂಬರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇದು ದೇಶದ ಕಾನೂನಾಗಿದ್ದು, ಸಿಎಎ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಲೋಕಸಭೆಗೂ ಮುನ್ನ ಸಿಎಎ ಜಾರಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಘೋಷಿಸಿದ್ದರು.